ನವದೆಹಲಿ: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ನೀಡಲಾಗಿದ್ದ ದೂರಿನ ವಿಚಾರದಲ್ಲಿ ಮೋದಿ ಹಾಗೂ ಶಾ ಅವರಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಸುಪ್ರೀಂ ಮೆಟ್ಟಿಲೇರಿತ್ತು. ಆದರೆ, ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ, ಆಯೋಗದ ನಿರ್ಧಾರವನ್ನು ನಾವು ಪ್ರಶ್ನಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಕುರಿತಂತೆ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗಗೋಯ್ ಮತ್ತು ದೀಪಕ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿಚಾರಣೆ ಚುನಾವಣಾ ಆಯೋಗದ ಕರ್ತವ್ಯವಾಗಿದೆ. ಅದರ ಕೆಲಸದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಮಾಡುವುದಿಲ್ಲ. ಅಂತೆಯೇ ಚುನಾವಣಾ ಆಯೋಗದ ನಿರ್ಧಾರವನ್ನೂ ತಾನು ಪ್ರಶ್ನಿಸುವುದಿಲ್ಲ ಎಂದಿದೆ.

















