ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುಂಸಿ ಠಾಣಾ ವ್ಯಾಪ್ತಿಯ ಸುತ್ತುಕೋಟೆ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಪ್ರವೀಣ್ ಎಂಬ ಯುವಕನ ಕೊಲೆ ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತನಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಸೀಳಲಾಗಿತ್ತು. ಆರೋಪಿ ಪತ್ತೆಗೆ ಈಗಾಗಲೇ ಎರಡು ತಂಡ ರಚನೆ ಮಾಡಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದರು.
ಕೊಲೆಯ ಹಿಂದಿನ ಕಾರಣವನ್ನು ವಿವಿಧ ಆಂಗಲ್‌ಗಳಲ್ಲಿ ಪರಿಶೀಲನೆ ಮಾಡಿ ತನಿಖೆ ಮುಂದುವರಿಸಿದ್ದೇವೆ ಎಂದರು.
ಏನಿದು ಸುತ್ತುಕೋಟೆ ಘಟನೆ?
ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಮನೆಯೊಳಗೆ ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿತ್ತು.
ಕೊಲೆಯಾದ ಯುವಕನನ್ನು ಸುತ್ತುಕೋಟೆ ಗ್ರಾಮದ ನಿವಾಸಿ ಪ್ರವೀಣ್ (29) ಎಂದು ಗುರುತಿಸಲಾಗಿದೆ. ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಕೊಂಡು ಜೀವನ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ.
ಎಂದಿನಂತೆ ನಿನ್ನೆ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ಈ ಕೃತ್ಯ ನಡೆದಿರುವುದಾಗಿ ಶಂಕಿಸಲಾಗಿದೆ.
ಆರೋಪಿಗಳು ತಲೆ ಭಾಗಕ್ಕೆ ಮಾರಕಾಸ್ತ್ರದಿಂದ ಹೊಡೆದು ಹತ್ಯೆ ಮಾಡಿರುವ ಸಾಧ್ಯತೆ ವ್ಯಕ್ತವಾಗಿದೆ.
ಕೆಲಸದ ನಿಮಿತ್ತ ಕೆಲ ಯುವಕರನ್ನು ಕರೆಸಿಕೊಂಡಿದ್ದ ಪ್ರವೀಣ್‌ಗೆ ಅವರು ಸಂಪರ್ಕಿಸಲು ಪ್ರಯತ್ನಿಸಿದರೂ, ಫೋನ್ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಮನೆಯೊಳಗೆ ಹೋಗಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕವಾಗಿ ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Comments 1