ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಒಟ್ಟು 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮುಂಜಾನೆಯಿಂದ ಮತದಾನ ಆರಂಭವಾಗಿದ್ದು, ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯುತ್ತಿದೆ. 14 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 10ರಲ್ಲಿ ಕಾಂಗ್ರೆಸ್, 4ರಲ್ಲಿ ಜೆಡಿಎಸ್ ಸ್ಪರ್ಧಿಸಿದೆ.
ರಾಜ್ಯದಲ್ಲಿ ಇಂದು ಆರಂಭವಾಗಿರುವ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 241 ಅಭ್ಯರ್ಥಿಗಳಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಸದಾನಂದ ಗೌಡ, ಮಾಜಿ ಕೇಂದ್ರ ಸಚಿವರಾದ ವೀರಪ್ಪ ಮೊಯ್ಲಿ ಕಣದಲ್ಲಿದ್ದಾರೆ.
ಇನ್ನು, ರಾಜ್ಯ ಮಾತ್ರವಲ್ಲ ದೇಶದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಂಬರೀಶ್ ಹುಟ್ಟೂರು ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿಕನಕೆರೆಯಲ್ಲಿ ಸುಮಲತಾ ಮತ್ತು ಮಗ ಅಭೀಷೇಕ್ ಗೌಡ ಮತ ಚಲಾಯಿಸಲಿದ್ದಾರೆ.
Discussion about this post