ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರೈಲ್ವೆ ಮೇಲ್ಸೇತುವೆ ಮತ್ತು ಹೊಳಲೂರು ಸನ್ಯಾಸಿ ಕೋಡಮೊಗ್ಗೆ ಸೇತುವೆ ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ, ವಿದ್ಯಾನಗರದಲ್ಲಿ ರೈಲ್ವೆ ಅಂಡರ್ ಪಾಸ್ ಮತ್ತು ಮೇಲ್ಸೇತುವೆ ಹಾಗೂ ಭದ್ರಾವತಿಯ ಕಡದಕಟ್ಟೆಯಲ್ಲಿ ಒಂದು ರೈಲ್ವೆ ಮೇಲ್ಸೇತುವೆ ಒಟ್ಟು 110 ರೂ. ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಘೋಯಲ್ ಅವರು ವೆರ್ಚುಯೆಲ್ ಮೂಲಕ ದೆಹಲಿಯಿಂದಲೇ ಶಂಕುಸ್ಥಾಪನೆ ಮಾಡಲಿದ್ದು, ಶಿವಮೊಗ್ಗದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಭಾಗವಹಿಸಲಿದ್ದಾರೆ ಎಂದರು.
ಫೆ.17ರಂದು ಆನವೇರಿಯ ಗುಡುಮಘಟ್ಟದಲ್ಲಿ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಹೊಳಲೂರು ಸೇತುವೆ ಉದ್ಘಾಟನೆ ಹಾಗೂ ಹಾಡೋನಹಳ್ಳಿಯಲ್ಲಿ ತಡೆಗೋಡೆ ಕಾಮಗಾರಿ ಶಂಕುಸ್ಥಾಪನೆ ಮಾಡಲಿದ್ದಾರೆ. ನಗರದ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ 20 ಕೋಟಿ ರೂ. ವೆಚ್ಚದಲ್ಲಿ ಇನ್ನೊಂದು ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಸ್ಥಳ ಪರಿಶೀಲನೆ ನಡೆಯಲಿದೆ ಎಂದರು. ಈ ತಿಂಗಳ ಅಂತ್ಯಕ್ಕೆ ಅಥವಾ ಮಾರ್ಚ್ ಮೊದಲ ವಾರದಲ್ಲಿ ಶಿವಮೊಗ್ಗದಲ್ಲಿ ಇನ್ನೊಂದು ಕ್ರೀಡಾಂಗಣ ನಿರ್ಮಾಣಕ್ಕೆ 45 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕೇಂದ್ರ ಕ್ರೀಡಾ ಸಚಿವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post