ಕಲ್ಪ ಮೀಡಿಯಾ ಹೌಸ್ | ತುಮಕೂರು |
ಒಮಿಕ್ರಾನ್ ಹೊಸ ರೂಪಾಂತರಿ ತಳಿ ರಾಜ್ಯದಲ್ಲಿ ತಲ್ಲಣ ಸೃಷ್ಟಿಸುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೂರನೇ ಅಲೆ ಬಾಧಿಸುವುದಿಲ್ಲ ಎಂದು ತಜ್ಞರು ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ದೇಶಗಳಲ್ಲಿ ಒಮಿಕ್ರಾನ್ ಭೀತಿ ಸೃಷ್ಟಿಸಿದೆ. ಎರಡನೇ ಅಲೆ ಕಾಣಿಸಿಕೊಂಡಾಗ ಸಾಕಷ್ಟು ಸಾವು-ನೋವು ಸಂಭವಿಸಿತ್ತು. ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ತಳಿ ಪತ್ತೆಯಾಗದಿದ್ದರೂ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದರು.
ನಗರದ ಸಿದ್ದಗಂಗಾ ಮಠದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ಹಾಗೂ ವೀರಶೈವ ಲಿಂಗಾಯತ ಯುವ ವೇದಿಕೆ ಕಡೆಯ ಕಾರ್ತಿಕ ಸೋಮವಾರದ ಅಂಗವಾಗಿ ಹಮ್ಮಿಕೊಂಡಿದ್ದ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪುಷ್ಪ ಬಿಲ್ವಾರ್ಚನೆ ಅರ್ಪಿಸಿ ಆಶೀರ್ವಾದ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ಈಗಾಗಲೇ ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರುಗಳಿಗೆ ಸೂಚನೆ ನೀಡಲಾಗಿದೆ ಎಂದರು.
ವಿದೇಶ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಮೇಲೂ ನಿಗಾ ವಹಿಸಲಾಗಿದ್ದು, ಗಡಿ ಭಾಗದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಎಲ್ಲಿ ಕೋವಿಡ್ ಪ್ರಕರಣಗಳು ಕಂಡು ಬಂದರೂ ಕ್ಲಸ್ಟರ್ ವಲಯ ಎಂದು ಘೋಷಿಸಿ ಸೋಂಕು ಹರಡದಂತೆ ಕ್ರಮ ವಹಿಸಲಾಗಿದೆ ಎಂದರು.
ಒಮಿಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ಸೋಂಕಿತರ ಗಂಟಲು ದ್ರವ ಮಾದರಿಯನ್ನು ಹೆಚ್ಚಿನ ಪ್ರಯೋಗಕ್ಕೆ ಒಳಪಡಿಸುತ್ತಿದ್ದು, ವೈರಾಣು ಹೊಸ ರೂಪಾಂತರಿ ಒಮಿಕ್ರಾನ್ ಅಥವಾ ಡೆಲ್ಟಾ ಪ್ಲಸ್ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಅಕಾಲಿಕ ಮಳೆ: ಹೆಚ್ಚಿನ ಪರಿಹಾರಕ್ಕೆ ಮನವಿ
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಬೆಳೆ ಹಾನಿ ಪರಿಹಾರಕ್ಕೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ 686 ಕೋಟಿ ರೂ. ಅನುದಾನವಿದೆ. ಈ ಅನುದಾನ ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನು ಅಗತ್ಯ ಇರುವ ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಬೆಳೆ ಹಾನಿ ಬಗ್ಗೆ ಸಮೀಕ್ಷೆ ನಡೆಸಿದ ನಂತರ ಹೆಚ್ಚಿನ ಪರಿಹಾರ ದೊರಕಲಿದೆ ಎಂದು ಅವರು ಹೇಳಿದರು.
ಈಗಾಗಲೇ ಕೆಲವೆಡೆ ಬೆಳೆ ಪರಿಹಾರವನ್ನು ವಿತರಿಸಲಾಗುತ್ತಿದ್ದು, ಪರಿಹಾರ ಆಪ್‌ನಲ್ಲಿ ಬೆಳೆ ಹಾನಿ ವಿವರಗಳನ್ನು ದಾಖಲಿಸುವ ಮೂಲಕ ಪರಿಹಾರ ವಿತರಿಸಬಹುದಾಗಿದ್ದು, ಕೇಂದ್ರ ತಂಡ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ ಬಳಿಕ ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆಯಬಹುದಾಗಿದೆ. ಹೆಕ್ಟೇರ್‌ಗೆ ಹೆಚ್ಚಿನ ಪರಿಹಾರ ಬೇಡಿಕೆ ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ಈ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.
ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಚರ್ಚಿಸಿ ದಾಸೋಹ ದಿನದ ರೂಪುರೇಷೆಗಳನ್ನು ರೂಪಿಸಲಾಗುವುದು ಎಂದರು.
ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಬದುಕಿದ್ದ ಕಾಲಘಟ್ಟದಲ್ಲಿ ನಾವುಗಳು ಇದ್ದೆವು ಎಂಬುದೇ ನಮ್ಮ ಪುಣ್ಯ ಭಾಗ್ಯ. ಅವರ ನೆನಪಿನಲ್ಲಿ ನಡೆಯುತ್ತಿರುವ ಲಕ್ಷ ಬಿಲ್ವಾರ್ಚನೆಯಲ್ಲಿ ಪಾಲ್ಗೊಂಡಿರುವುದು ನನ್ನ ಭಾಗ್ಯ ಎಂದರು.
ಇದೇ ಸಂದರ್ಭದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ದಂಪತಿ ಸಮೇತ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು, ಸ್ವಲ್ಪಹೊತ್ತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ವೀರಶೈವ ಲಿಂಗಾಯತ ಯುವ ವೇದಿಕೆಯ ಪ್ರಶಾಂತ್ ಕಲ್ಲೂರು, ದೀಪಕ್, ಚಂಗಾವಿ ರವಿ, ಅರಕೆರೆ ರವೀಶ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post