ಮುಂಬೈ: ವಾಣಿಜ್ಯ ನಗರಿಯ ಜನನಿಬಿಡ ಪ್ರದೇಶವಾದ ಛತ್ರಪತಿ ಶಿವಾಜಿ ಟರ್ಮಿನಸ್ ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಸೇತುವೆ ಕುಸಿದ ಪ್ರಕರಣದಲ್ಲಿ ಐವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಗಾಯಾಳುಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದ ಮುಂಬೈನಲ್ಲಿ ಇಂದು ಸಂಜೆ 7.30 ಘಟನೆ ನಡೆದಿದ್ದು, ಜನರ ಸಂಚರಿಸುತ್ತಿದ್ದ ವೇಳೆ ಸೇತುವೆ ಏಕಾಏಕಿ ಕುಸಿದಿದೆ. ಹಲವು ಮಂದಿ ಸೇತುವೆಯ ಅಡಿಯಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಇನ್ನು ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ.
ಘಟನೆ ನಡೆದ ತಕ್ಷಣ ಎನ್‌ಡಿಆರ್‌ಎಫ್, ಅಗ್ನಿ ಶಾಮಕ ದಳ, ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇನ್ನು ಘಟನೆ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಘಟನೆಯಲ್ಲಿ ಮೃತರಾದ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸುತ್ತೇನೆ. ಅಗತ್ಯವಿರುವ ಎಲ್ಲ ಕ್ರಮಗಳನ್ನು ಮಹಾರಾಷ್ಟ್ರ ಸರ್ಕಾರ ಕೈಗೊಳ್ಳಲಿದೆ ಎಂದಿದ್ದಾರೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಇದೊಂದು ನಡೆಯಬಾರದಿದ್ದ ದುರ್ಘಟನೆ. ರಕ್ಷಣಾ ಕಾರ್ಯ ಹಾಗೂ ಗಾಯಾಳುಗಳ ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ.
Discussion about this post