ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ವೃತ್ತಿಪರ ಮತ್ತು ವೃತ್ತಿಪರವಲ್ಲದ ಕೋರ್ಸ್‌ಗಳ ಮೂರನೇ ಸೆಮಿಸ್ಟರ್ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದಂತೆ ಇಂದು ದಿನಪತ್ರಿಕೆಗಳು ಮತ್ತು ವೆಬ್‌ತಾಣಗಳಲ್ಲಿ ಪ್ರಕಟವಾಗಿರುವ ಸುದ್ದಿಯಲ್ಲಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಪ್ಪು ಸಂದೇಶ ರವಾನೆಯಾಗಿದೆ ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿ ನ್ಯಾಯಸಮ್ಮತವಾಗಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಭಾಗದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯಾರ್ಥಿಗಳ ಹಿತ ಕಾಯಬೇಕಾಗಿರುವುದು ವಿಶ್ವವಿದ್ಯಾಲಯದ ಕರ್ತವ್ಯ ಎಂಬುದರ ಅರಿವಿದೆ. ಹೀಗಾಗಿ, ವಿದ್ಯಾರ್ಥಿಗಳೇ ಹೆಚ್ಚು ಶುಲ್ಕ ಕಟ್ಟಬೇಕಾದ ಪರಿಸ್ಥಿತಿ ಇದೆ ಎಂದು ತಾವು ಹೇಳಿಕೆ ನೀಡಲು ಹೇಗೆ ಸಾಧ್ಯ? ಈ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಹೇಳಿಕೆ ಸರಿಯಾದುದಲ್ಲ ಎಂದಿದ್ದಾರೆ.
ವಿಶ್ವವಿದ್ಯಾಲಯ ಆರ್ಥಿಕ ಸಂಕಷ್ಟದಲ್ಲಿರುವುದು ನಿಜ. ಸರ್ಕಾರದಿಂದ ಕಳೆದ ಮೂರು ತಿಂಗಳಿನಿಂದ ವೇತನ ಅನುದಾನ ಸೇರಿದಂತೆ ಇತರೆ ಯಾವುದೇ ರೀತಿಯ ಆರ್ಥಿಕ ಸಹಾಯ ದೊರಕುತಿಲ್ಲ. ದೂರಶಿಕ್ಷಣ ನಿರ್ದೇಶನಾಲಯ ಕೂಡ ಕಾರ್ಯನಿರ್ವಹಿಸುವಂತಿಲ್ಲ. ಹೀಗಾಗಿ, ಕುಲಸಚಿವರು, ಮತ್ತು ಪರೀಕ್ಷಾಂಗ ಕುಲಸಚಿವರೊಂದಿಗೆ ಮಾತುಕತೆ ನಡೆಸಿ ಶುಲ್ಕ ಹೊಂದಾಣಿಕೆಯ ಬಗ್ಗೆ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು ಎಂದಷ್ಟೇ ವಿದ್ಯಾರ್ಥಿಗಳಿಗೆ ಸ್ಪಷ್ಟಪಡಿಸಲಾಗಿತ್ತು. ಆದರೆ ಮಾಧ್ಯಮಗಳಲ್ಲಿ ಈ ಮಾಹಿತಿ ತಪ್ಪಾಗಿ ವರದಿಯಾಗಿದೆ ಎಂದು ಕುಲಪತಿಗಳು ಸ್ಪಷ್ಠಪಡಿಸಿದ್ದಾರೆ.
ಮೂರನೆಯ ಸೆಮಿಸ್ಟರ್ ಪರೀಕ್ಷೆಗಳು ಶೀಘ್ರದಲ್ಲಿ ಪ್ರಾರಂಭವಾಗಲಿರುವುದರಿಂದ ವಿದ್ಯಾರ್ಥಿಗಳು ಈಗ ಪರೀಕ್ಷಾ ಶುಲ್ಕವನ್ನು ಪಾವತಿಸಲಿ. ನಂತರ ಆದ್ಯತೆಯ ಮೇರೆಗೆ ಶುಲ್ಕ ಹೊಂದಾಣಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪೂರಕವಾಗಿ, ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಹೊರೆಯಾಗದಂತಹ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post