ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆ ನಗರ ಮತ್ತು ಗ್ರಾಮೀಣ ಪ್ರದೇಶದ ಜನರ ಜೀವನ ಸಂಕಷ್ಟದಲ್ಲಿರುವ ಸಂದಿಗ್ಧ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ, ಅವರ ನೆಮ್ಮದಿಯ ಬದುಕಿಗೆ ಆಸರೆ ಒದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಶಿವಮೊಗ್ಗ ಸಮೀಪದ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಿಕೆ ಚೀಲೂರಿನ ರಾಮಪ್ಪನ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕೆರೆ ಕಾಮಗಾರಿಯನ್ನು ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವಿನೊಂದಿಗೆ ನಿರ್ವಹಿಸಲಾಗುತ್ತಿರುವ ಈ ಯೋಜನೆಯಡಿ ಅಂತರ್ಜಲ ಚೇತನ ಯೋಜನೆಯನ್ನು ರಾಜ್ಯದಾದ್ಯಂತ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಯೋಜನೆಯಡಿ ಜಿಲ್ಲೆಯ 271 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಆಸಕ್ತರೆಲ್ಲರಿಗೂ ಉದ್ಯೋಗಾವಕಾಶ ದೊರೆಯಲಿದೆ ಅಲ್ಲದೇ ನಿರುದ್ಯೋಗಿಗಳಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯಲಿದೆ ಎಂದರು.
ವಿಶೇಷವಾಗಿ ಅಂತರ್ಜಲ ಚೇತನ ಯೋಜನೆಯಡಿ ಕೈಗೊಂಡ ಕಾಮಗಾರಿಗಳಿಂದಾಗಿ ಮಳೆ ನೀರು ಸಂಗ್ರಹಣೆ ಮತ್ತು ಮಣ್ಣಿ ಸವಕಳಿ ತಡೆ, ಮಣ್ಣಿನ ತೇವಾಂಶ ಹೆಚ್ಚಳ, ಸ್ವಾಭಾವಿಕ ಹಳ್ಳಗಳುದ್ದಕ್ಕೂ ಕೃತಕ ಅಂತರ್ಜಲ ಮರುಪೂರಣ ರಚನೆಗಳನ್ನು ನಿರ್ಮಿಸುವ ಹಾಗೂ ಸ್ವಾಭಾವಿಕ ಸಸ್ಯವರ್ಗ ಹೆಚ್ಚಿಸುವ ಕಾರ್ಯ ನಡೆಯಲಿದೆ ಎಂದ ಅವರು, ಜಿಲ್ಲೆಯಲ್ಲಿ ಬೋಲ್ಡರ್ ಚೆಕ್(ಕಲ್ಲುಗುಂಡು ತಡೆ) ನಿರ್ಮಾಣ, ಇಂಗುಬಾವಿ, ಇಂಗುಕೊಳವೆ, ಕೆರೆ ಹೊಂಡ ಸೇರಿದಂತೆ ಒಟ್ಟು 32,731 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಆರ್ಟ್ ಆಫ್ ಲಿವಿಂಗ್ ಇವರ ಸಹಯೋಗದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮದ ಕುರಿತು ಜನರಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತವಾಗಿದ್ದು, ನಿರೀಕ್ಷಿತ ಸಾಧನೆ ಮಾಡುವ ಆಶಯ ಹೊಂದಲಾಗಿದೆ. ಈ ಯೋಜನೆಯನ್ನು ರಾಜ್ಯದ 5400 ಗ್ರಾಮ ಪಂಚಾಯಿತಿಗಳಲ್ಲಿ ವಿಸ್ತರಿಸುವ ಬಗ್ಗೆ ಆಲೋಚನೆ ನಡೆಸಲಾಗಿದೆ ಎಂದರು.
ಶ್ರಮಿಕರು ತಮ್ಮ ಉದ್ಯೋಗ ಖಾತ್ರಿ ಕೆಲಸದೊಂದಿಗೆ ತಮ್ಮ ದೈನಂದಿನ ಕೆಲಸವನ್ನು ನಿರ್ವಹಿಸಬಹುದಾಗಿದೆ. 9.50 ಲಕ್ಷ ರೂ.ಗಳ ಮೊತ್ತದ ಮೊದಲ ಹಂತದ ಕಾಮಗಾರಿ ಈಗಾಗಲೆ ಪೂರ್ಣಗೊಂಡಿದೆ. 9.50 ಲಕ್ಷ ಮೊತ್ತದ ಕಾಮಗಾರಿ ಪ್ರಗತಿಯಲ್ಲಿದೆ. 9.50 ಲಕ್ಷ ಮೊತ್ತದ ಮತ್ತೊಂದು ಕಾಮಗಾರಿ ಸೇರಿ ಮುಂದಿನ 15 ದಿನಗಳ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಾಮಪ್ಪನ ಕೆರೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ ಶ್ರಮಿಕರಿಗೆ ವರ್ಷವಿಡೀ ಕೆಲಸ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ತಮ್ಮ ಸಂಪಾದನೆಯ ಅಲ್ಪ ಹಣದ 3 ಚೆಕ್’ಗಳನ್ನು ಕೋವಿಡ್-19 ನಿಯಂತ್ರಣಕ್ಕಾಗಿ ಸರ್ಕಾರ ಕೈಗೊಳ್ಳುವ ಕಾರ್ಯಕ್ಕೆ ಬಳಸಿಕೊಳ್ಳುವ ಸಲುವಾಗಿ ಮಾನ್ಯ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ಸಚಿವರ ಮೂಲಕ ಸಮರ್ಪಿಸಿದರು. ಚೆಕ್‌ನ್ನು ಪಡೆದ ಸಚಿವರು ಮಾತನಾಡಿ, ಹಣವಂತರು ದಾನ ನೀಡುವುದು ಸಹಜ. ಆದರೆ, ಶ್ರಮಿಕರು, ಜನಸಾಮಾನ್ಯರು ಸಾರ್ವಜನಿಕ ಕಳಕಳಿಯಿಂದ ಸರ್ಕಾರಕ್ಕೆ ನೀಡುವ ಆರ್ಥಿಕ ನೆರವು ಮಹತ್ವದ್ದಾಗಿರಲಿದೆ ಎಂದರು.
ಕೊರೋನ ಸೋಂಕನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಜನಸಾಮಾನ್ಯರ ಜನಜೀವನ ಕಷ್ಟಕರವಾಗಿರುವ ಈ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವ ರಾಜ್ಯದ ಅನ್ನದಾತರು, ಅಗಸರು, ಕ್ಷೌರಿಕರು, ನೇಕಾರರು ಹಾಗೂ ಆಟೋಚಾಲಕರ ನೆರವಿಗೆ ಧಾವಿಸಿ 1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದ ಮೊದಲ ರಾಜ್ಯ ನಮ್ಮದಾಗಿದೆ. ನೊಂದ ಜನರ ನೆರವಿಗೆ ಧಾವಿಸಿ, ಇಂತಹ ಮಹತ್ವದ ಯೋಜನೆಯನ್ನು ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದನಾರ್ಹರು ಎಂದರು.
ಇದೇ ಸಂದರ್ಭದಲ್ಲಿ ಹೊಳಲೂರಿನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ. ಕಾಂತೇಶ್, ಹೊಳಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ. ರಾಜು, ಸದಸ್ಯೆ ಸುಮಾ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post